ಶಾಸಕ ಕೆ.ಎಂ. ಶಿವಲಿಂಗೇಗೌಡರಿಂದ ವಿಶೇಷ ಪೂಜೆ; ಲಕ್ಷಾಂತರ ಭಕ್ತರಿಂದ ದೇವರ ದರ್ಶನ
ಅರಸೀಕೆರೆ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಾಲೆಕಲ್ (ಚಿಕ್ಕು) ತಿರುಪತಿಯ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ಭಾನುವಾರ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಲಕ್ಷಾಂತರ ಭಕ್ತರು ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಜಾತ್ರಾ ಮಹೋತ್ಸವದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಭಾಗವಹಿಸಿ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಸುಭಿಕ್ಷತೆ, ಉತ್ತಮ ಮಳೆ, ರೈತರ ಅಭಿವೃದ್ಧಿ ಹಾಗೂ ಜನರ ಸುಖ–ಶಾಂತಿಗಾಗಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಅರಸೀಕೆರೆ ತಾಲೂಕು ದಂಡಾಧಿಕಾರಿ ಸಂತೋಷ್ ಕುಮಾರ್, ಅರಸೀಕೆರೆ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅರುಣಕುಮಾರ್ ಸೇರಿದಂತೆ ಹಲವು ಗಣ್ಯರು ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.
ಜಾತ್ರೆ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ–ಕೈಂಕರ್ಯಗಳು, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ನಡೆದವು. ಭಕ್ತರ ಅನುಕೂಲಕ್ಕಾಗಿ ದೇವಾಲಯ ಆಡಳಿತ ಮಂಡಳಿ ಅಗತ್ಯ ಮೂಲಸೌಕರ್ಯ ಹಾಗೂ ವ್ಯವಸ್ಥೆ ಕಲ್ಪಿಸಿತ್ತು. ಪೊಲೀಸ್ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಿಬ್ಬಂದಿ ಸುಗಮ ದರ್ಶನ ಹಾಗೂ ಭದ್ರತಾ ವ್ಯವಸ್ಥೆ ನಿರ್ವಹಿಸಿದರು.
ಜಾತ್ರೆಯಲ್ಲಿ ಭಾಗವಹಿಸಿದ್ದ ಲಕ್ಷಾಂತರ ಭಕ್ತರು ಭಕ್ತಿಭಾವದಿಂದ ಸ್ವಾಮಿಯ ದರ್ಶನ ಪಡೆದು ತಮ್ಮ ಹರಕೆಗಳನ್ನು ಸಲ್ಲಿಸಿದರು. ದೇವಾಲಯದ ಆವರಣ ದಿನವಿಡೀ ಭಕ್ತರಿಂದ ಕಿಕ್ಕಿರಿದು, ಧಾರ್ಮಿಕ ಸಂಭ್ರಮ ಮನೆಮಾಡಿತ್ತು.
– ವರದಿ: ಎಂ.ಡಿ. ನಾಸೀರ್, ಅರಸೀಕೆರೆ
